
ಸೋಮವಾರ, ಮೇ 15ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭ ಎಂದು ಹೇಳಲಾಗಿತ್ತು. ಆದರೆ, ಇನ್ನೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿಲ್ಲದ ಕಾರಣ, ಪ್ರಮಾಣವಚನ ಸಮಾರಂಭವನ್ನು ಕಾಂಗ್ರೆಸ್ ಮುಂದೂಡಿದೆ ಎನ್ನಲಾಗಿದೆ.ಗುರುವಾರ, ಮೇ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.ಈಗಾಗಲೇ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಎಐಸಿಸಿ ಮೂವರು ವೀಕ್ಷಕರನ್ನು ನೇಮಕ ಮಾಡಿದೆ. ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಅವರು ವೀಕ್ಷಕರಾಗಿ ಬಂದು ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ.ಬಳಿಕ ಎರಡೂ ನಾಯಕರನ್ನು ಮನವೊಲಿಸಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಅನಂತರ ಒಂದೆರೆಡು ದಿನದಲ್ಲಿ ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದು, ಇದೇ ವೇಳೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ಕಳುಹಿಸಿದೆ ಎಂದು ತಿಳಿದುಬಂದಿದೆ.
