
ಹಾಸನ: ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಮೆರವಣಿಗೆ ಮೂಲಕ ಬಂದ ಅವರು, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, ೨೦೨೪ ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದೆ. ಎನ್.ಡಿ.ಎ. ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ೧೦ ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ೨ ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ ರೂ ೧೫ ಲಕ್ಷ, ಡಾ. ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ತಿಳಿಸಲಾಗಿತ್ತು.
ಆದರೆ ಸಬ್‌ಕಾ ಸಾಥ್ ಎಂದು ಜನಸಾಮಾನ್ಯರ ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಿ, ಜನರಿಗೆ ೨೭೦೦ ಕ್ಯಾಲೋರಿ ಆಹಾರ ಪ್ರತಿದಿನ ಸಿಗದ ಪರಿಣಾಮ ಇಂದು ಭಾರತ ಹಸಿವಿನ ಸೂಚ್ಯಾಂಕದಲ್ಲಿ ೧೧೧ನೇ ಸ್ಥಾನಕ್ಕೆ ಕುಸಿದಿದೆ ಎಂದರು.
ಆರ್ಥಿಕ ಬಿಕ್ಕಟ್ಟನ್ನು ಕರೋನಾ ಮುಂಚಿತವಾಗಿದ್ದ ಬೆಳವಣಿಗೆಗೆ ಹೋಲಿಸದೇ ಕರೋನಾ ನಂತರದ ಬೆಳವಣಿಗೆಗೆ ಹೋಲಿಸಿ ಆರ್ಥಿಕ ಬಿಕ್ಕಟ್ಟು ಸುಧಾರಿಸಿದೆ ಎಂದು ಹೇಳಲಾಗುತ್ತಿದೆ. ಆರ್ಥಿಕ ಬಿಕ್ಕಟ್ಟು ಸುಧಾರಿಸಿದ್ದರೆ ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಮುಷ್ಕರದ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕನ್ನು ಏಕೆ ಕಸಿಯಲಾಗುತ್ತಿದೆ. ೫ ಟ್ರಿಲಿಯನ್ ಆರ್ಥಿಕತೆಯನ್ನು ಸಾಧಿಸುವ ಭಾರತದಲ್ಲಿ ೪೨.೩% ನಿರುದ್ಯೋಗ ಏಕೆ? ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರತಿಪಾದನೆ ಮಾಡುವ ಸರ್ಕಾರ ೧೦೦ಕ್ಕೆ ೬೦% ಗುತ್ತಿಗೆ-ಹೊರಗುತ್ತಿಗೆಯ ಹುದ್ದೆಗಳನ್ನು ಏಕೆ ಸೃಷ್ಟಿಸುತ್ತಿದೆ? ಸರ್ಕಾರದ ಇಂತಹ ಆರ್ಥಿಕ ನೀತಿಗಳಿಂದ ಬಡವರ ಭಾರತ ಮತ್ತು ಶ್ರೀಮಂತರ ಭಾರತವನ್ನು ಸೃಷ್ಟಿಸಿ ದೊಡ್ಡ ಪ್ರಮಾಣದ ಆರ್ಥಿಕ ಅಸಮಾನತೆಯ ಕಂದಕವನ್ನು ಸೃಷ್ಟಿಸಿರುವುದು ’ಸಬ್‌ಕಾ ವಿಕಾಸ್’ ಎನ್ನುವ ಘೋಷಣೆಯಾಗಿದೆ ಎಂದು ಹೇಳಿದರು.
ಭಾರತವನ್ನು ಕಟ್ಟಿರುವ ಸಾರ್ವಜನಿಕ ಕೈಗಾರಿಕೆಗಳನ್ನು ಖಾಸಗೀಕರಿಸಿದ್ದಲ್ಲದೇ ಸರ್ಕಾರದ ಆಸ್ತಿಯನ್ನು ಓಒP ಯ ಮುಖಾಂತರ ಖಾಸಗೀಯವರಿಗೆ ದಾನ ಮಾಡಿದರೆ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಲು ಸಾದ್ಯವಿದೆಯಾ? ಗರಿಷ್ಠ ಆಡಳಿತ ಕನಿಷ್ಠ ಸರ್ಕಾರ ಎಂದರೆ ಸಾರ್ವಜನಿಕ ಒಡೆತನವನ್ನು ಖಾಸಗಿ ವೈಕ್ತಿಗಳಿಗೆ ಅಡಮಾನ ಇಡುವುದೇ? ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುವ ನೀತಿ ಸರಿಯೇ? ಕೋಮುಭಾವನೆಗಳನ್ನು ಪ್ರಚೋದನೆಗೊಳಿಸಿ ಜನರನ್ನು ಧಾರ್ಮಿಕವಾಗಿ ಕಿತ್ತಾಡಲು ಬೇಕಾದ ವಿಷಮ ವಾತಾವರಣವನ್ನು ಸೃಷ್ಟಿಸುವುದು ’ಸಬ್‌ಕಾ ವಿಶ್ವಾಸ್’ ಎಂದಾರಾಗುತ್ತದೆಯೇ?
ಆದ್ದರಿಂದ ಸರ್ಕಾರ ಸಂಪೂರ್ಣವಾಗಿ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲಾ ರೈತರು, ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ಇಂತಹ ಚಳುವಳಿಗಳ ಮೇಲೆ ದೆಹಲಿಯಲ್ಲಿ ಪೊಲೀಸ್ ದಬ್ಬಾಳಿಕೆ ಮಾಡಿರುವುದನ್ನು ಖಂಡಿಸುತ್ತೇವೆ ಮತ್ತು ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಮೂಲಕ ಒತ್ತಾಯಿಸಲಾಗುತ್ತಿದೆ ಎಂದು ಕೋರಿದರು.
ಸಿಐಟಿಯು ಜಿಲ್ಲಾಧ್ಯಕ್ಷರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಕೆಪಿಆರ್‌ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರು ಪ್ರಕಾಶ್ ಇತರರು ಉಪಸ್ಥಿತರಿದ್ದರು.
