
ಬೇಲೂರು : ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದ ಮತ್ತು ಹವಾಮಾನ ಬದಲಾವಣೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಮಲೇರಿಯಾ, ಡೆಂಗ್ಯೂನಂತಹ ರೋಗಗಳ ಬಗ್ಗೆ ಜನರು ಜಾಗೃತಿವಹಿಸಬೇಕು ಎಂದು ಇಬ್ಬೀಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಮಂಜುನಾಥ್ ಹೇಳಿದರು.
ಹೌದು…! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ಜ್ವರದ ಕುರಿತು ಇಬ್ಬೀಡು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಹೂವಿನ ಕುಂಡಗಳು, ಬಿಸಾಡಿದ ಟೈರ್‌ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂತಹ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
ಈಗಾಗಲೇ ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಔಷಧಿ ಸಿಂಪಡಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಜೊತೆಗೆ ಮನೆ-ಮನೆಗೆ ಡೆಂಗ್ಯೂ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಕಾರ್ಯದರ್ಶಿ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯ ಸಚ್ಚಿನ್, ಸುಮಿತ್ರ ಶಂಕರಯ್ಯ, ಬಿಜೆಪಿ ಮುಖಂಡ ಮಂಜುನಾಥ್, ಇಬ್ಬೀಡು ಗ್ರಾಮಸ್ಥರಾದ ಮೊಗಪ್ಪ, ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.


