
ಆಲೂರು : ಸರ್ಕಾರ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ಈ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಆಲೂರು ಸಕಲೇಶಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುರುಳಿಮೋಹನ್ ತಿಳಿಸಿದರು.
ಹಿಂದುಳಿದ ವರ್ಗದವರು, ಅಸಹಾಯಕರಿಗೆ, ವಿದ್ಯಾವಂತ ನಿರುದ್ಯೋಗಿಗಳಿಗೆ, ಮಹಿಳೆಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದ್ದಾರೆ.
ಗ್ಯಾರೆಂಟಿ ಯೋಜನೆಯು ಒಳ್ಳೆಯ ಯೋಜನೆಯಾಗಿದೆ ಇದನ್ನು ಕಾಂಗ್ರೆಸ್ ಸರ್ಕಾರ ಮುಂದುವರೆಸಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮನಗಂಡು ವಿರೋಧ ಪಕ್ಷಗಳು ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ರಾಜ್ಯ ಅಭಿವೃದ್ಧಿಯಾಗುತ್ತಿಲ್ಲ ಎಂದು ಇನ್ನಿಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ 224 ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೇಮಕ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರು ಒಬ್ಬ ಫಲಾನುಭವಿಯು ಸರ್ಕಾರದ ಯೋಜನೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಬೇಕುಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಜನಪರ ಆಡಳಿತ ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ಯಾವುದೇ ವಿಚಾರಗಳು ಇಲ್ಲದೆ ಇರುವುದರಿಂದ ಗ್ಯಾರಂಟಿಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ರಾಜ್ಯದ ಯಾರೊಬ್ಬರು ಇವರ ಮಾತಿಗೆ ಬೆಲೆ ನೀಡಬಾರದು ಎಂದು ಮನವಿ ಮಾಡಿದರು.
ಇನ್ನು ಚುನಾವಣಾ ಸಂದರ್ಭದಲ್ಲಿ ಪಕ್ಷಕ್ಕಾಗಿ ಹಗಲು ರಾತ್ರಿ ಎನ್ನದೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಹಲವು ಸಮಿತಿಗಳಲ್ಲಿ ಅಧಿಕಾರ ನೀಡಲಾಗಿದೆ. ಇನ್ನು ಹಲವು ಸಮಿತಿಗಳಿಗೆ ನೇಮಕ ಮಾಡಬೇಕಾಗಿರುವುದು ಬಾಕಿ ಇರುವುದರಿಂದ ಆದಷ್ಟು ಬೇಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ನೀಡುವಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮಿತಿಗಳಿಗೂ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಲಾಗುವುದು. ಅಕ್ರಮ ಸಕ್ರಮ ಕಮಿಟಿಗೆ ಬೇರೆ ಪಕ್ಷದ ಮುಖಂಡರುಗಳನ್ನು ನೇಮಕ ಮಾಡಲಾಗಿತ್ತು. ತದನಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರ ಆ ಸದಸ್ಯರುಗಳನ್ನು ವಜಾ ಮಾಡಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದಾರೆ.
ಪಕ್ಷಕ್ಕಾಗಿ ದುಡಿದವರಿಗೆ ಒಂದಲ್ಲ ಒಂದು ದಿನ ಒಳ್ಳೆಯ ದಿನಗಳು ಬಂದೇ ಬರುತ್ತದೆ ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡಬೇಕು ಎಂದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದ್ದು ನಿಮಗೆ ಅಧಿಕಾರ ಸಿಗುವ ಚುನಾವಣೆಯಾಗಿದೆ ಪ್ರತಿಯೊಬ್ಬರು ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪೃಥ್ವಿ ಜಯರಾಮ್ ಮಾತನಾಡಿ ನಮ್ಮ ನಾಯಕರಾದ ಶ್ರೇಯಸ್ ಎಂ ಪಟೇಲ್ ಹಾಗೂ ಮುರುಳಿ ಮೋಹನ್ರವರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ಹಾಗೂ ಪಕ್ಷಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.