ಹಾಸನ-ಬೇಲೂರು ರಸ್ತೆಯ ಸರೋವರ್ ಫಿಶ್ ಹೊಟೇಲ್ ಬಳಿ (ಹೂವಿನಹಳ್ಳಿ ಕಾವಲು – ಕುಪ್ಪಳ್ಳಿ ನಡುವೆ) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ.

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಈ ದುರಂತ ಸಂಭವಿಸಿದೆ.

ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಸ್ವಿಫ್ಟ್ ಕಾರು ಮತ್ತು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಸ್ವಿಫ್ಟ್ ಕಾರಿನ ಮುಂಭಾಗವೂ ಸಂಪೂರ್ಣ ಜಖಂ ಆಗಿದೆ.ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರಿಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಒಬ್ಬ ಯುವಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಮೃತಪಟ್ಟ ಯುವಕನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಹಾಸನ-ಬೇಲೂರು ರಸ್ತೆಯಲ್ಲಿ ಮತ್ತೊಮ್ಮೆ ರಸ್ತೆ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *