
ಸಕಲೇಶಪುರ: ಬಾಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಓ) ಚಿನ್ನಸ್ವಾಮಿ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಆಗ್ರಹಿಸಿ, ಸಕಲೇಶಪುರ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣದ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಚೇರಿ ಎದುರು ಒಂದು ತಿಂಗಳ ಹಿಂದೆ ಧರಣಿ ನಡೆಸಿದ್ದರು.
ಬೆಳಿಗ್ಗೆಯಿಂದ ಸಂಜೆವರೆಗೆ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಆರೋಪಗಳ ಹಿನ್ನೆಲೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಅವರು ಪಿಡಿಓ ಚಿನ್ನಸ್ವಾಮಿ ಅವರನ್ನು ಬೇರೆ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದ್ದರೂ, ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದೀಗಲೂ ಪಿಡಿಓ ಚಿನ್ನಸ್ವಾಮಿ ಅವರು ಬಾಗೆ ಗ್ರಾಮ ಪಂಚಾಯಿತಿಯಲ್ಲೇ ಮುಂದುವರಿದಿರುವುದರ ಜೊತೆಗೆ, ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಉಸ್ತುವಾರಿ ಜವಾಬ್ದಾರಿಯನ್ನು ಯಾರಿಗೂ ವಹಿಸದೇ ಇರುವುದು ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಆರೋಪಿಸಲಾಗಿದೆ.ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಭ್ರಷ್ಟಾಚಾರಿಗಳಿಗೆ ಬೆಂಬಲ ನೀಡುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಕಲೇಶಪುರ ಘಟಕದ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ ಗಂಭೀರ ಆರೋಪ ಮಾಡಿದ್ದಾರೆ.
ಮೇಲಾಧಿಕಾರಿಗಳು ಹೇಳುವುದು ಒಂದು, ಮಾಡುವುದು ಇನ್ನೊಂದು. ಇಂದಿನವರೆಗೂ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿದೆ. ಮುಂದಿನ ವಾರ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
