ಸಕಲೇಶಪುರ : ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಅಜ್ಜಿಗುಡ್ಡೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಗ್ರಾಮದಲ್ಲಿ ಸಾಮಾಜಿಕ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಕೆಲ ಅಂಗಡಿಗಳಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರ ವಿರೋಧದ ನಡುವೆಯೂ ಈ ಚಟುವಟಿಕೆ ನಿರಂತರವಾಗಿ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

ಗ್ರಾಮದ ಮುಖ್ಯ ರಸ್ತೆ ಹಾಗೂ ವಸತಿ ಪ್ರದೇಶಗಳ ಸಮೀಪದಲ್ಲಿಯೇ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಮಹಿಳೆಯರು ಹಾಗೂ ಹಿರಿಯ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಯುವಕರು ಮದ್ಯಪಾನಕ್ಕೆ ಒಳಗಾಗುತ್ತಿದ್ದು, ಕೆಲ ಕುಟುಂಬಗಳಲ್ಲಿ ಜಗಳ, ಕಲಹ ಹಾಗೂ ಆರ್ಥಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

“ದಿನಸಿ ಅಂಗಡಿ ಹೆಸರಿನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸಂಜೆ ವೇಳೆಯಲ್ಲಿ ಮದ್ಯಪಾನ ಮಾಡಿದವರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದು, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಓಡಾಡಲು ಭಯಪಡುವಂತಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಲ ಅಂಗಡಿಗಳು ಅನಧಿಕೃತವಾಗಿ ನಿರ್ಮಾಣಗೊಂಡಿದ್ದು, ಯಾವುದೇ ನಿಯಮ ಪಾಲನೆ ಇಲ್ಲದೇ ವ್ಯಾಪಾರ ನಡೆಸುತ್ತಿರುವುದರಿಂದ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರೇ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಅಂಗಡಿಗಳನ್ನು ಮುಚ್ಚಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *