ಸಕಲೇಶಪುರ : ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೆ ಭಾಷೆ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ಹೇಳಿದರು.

ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಭಾಷಾ ವಿಷಯಗಳಿಗೆ ನೀಡಲಾಗುತ್ತಿದ್ದ ಮಹತ್ವ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಭರದಲ್ಲಿ ಭಾಷಾ ಶಿಕ್ಷಣ ಕಡೆಗಣನೆಗೆ ಒಳಗಾಗುತ್ತಿದೆ. ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಷೆಯ ಮಹತ್ವವನ್ನು ಅರಿತು ಅದಕ್ಕೆ ಅಗತ್ಯವಾದ ಪ್ರಾಮುಖ್ಯತೆ ನೀಡಬೇಕು ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ ಅತ್ಯಗತ್ಯವಾಗಿದೆ. ಭಾಷಾ ನೈಪುಣ್ಯತೆ ವ್ಯಕ್ತಿಯ ಚಿಂತನೆ, ಅಭಿವ್ಯಕ್ತಿ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದ್ದು, ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ. ಕೇವಲ ಪ್ರಶ್ನೆಗಳಿಗೆ ಉತ್ತರ ಬರೆದು ಅಂಕ ಗಳಿಸುವುದೇ ಶಿಕ್ಷಣದ ಉದ್ದೇಶವಲ್ಲ. ಭಾಷೆಯಲ್ಲಿ ವಾಕ್ಯ ರೂಪದಲ್ಲಿ ತಮ್ಮ ವಿಚಾರಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಚುಟುಕು ಉತ್ತರಗಳ ಸಂಸ್ಕೃತಿ ಹೆಚ್ಚುತ್ತಿರುವ ಪರಿಣಾಮ ಭಾಷೆಯ ಮೇಲಿನ ಹಿಡಿತ ಕುಗ್ಗುತ್ತಿದ್ದು, ಓದು ಹಾಗೂ ಬರವಣಿಗೆಯ ಅಭ್ಯಾಸ ಕಡಿಮೆಯಾಗುತ್ತಿದೆ. ಭಾಷೆಯ ಮೂಲಕವೇ ಭಾವನೆಗಳು, ಜ್ಞಾನ ಹಾಗೂ ಸಂಸ್ಕಾರಗಳ ಬೆಳವಣಿಗೆ ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮತ್ತು ಪ್ರೀತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಕೇವಲ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವುದಕ್ಕೆ ಸೀಮಿತವಾಗದೆ, ಅವರ ಭವಿಷ್ಯದ ಜವಾಬ್ದಾರಿಯನ್ನು ನೆನಪಿಸುವ ವೇದಿಕೆಗಳಾಗಬೇಕು. ಇಂದು ಸನ್ಮಾನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸಮಾಜಮುಖಿ ಸೇವೆ ಸಲ್ಲಿಸಿದಾಗ ಮಾತ್ರ ಈ ಗೌರವಕ್ಕೆ ನಿಜವಾದ ಅರ್ಥ ಸಿಗುತ್ತದೆ. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಇದ್ದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.ಪ್ರತಿಭೆಯೊಂದಿಗೆ ಮಾನವೀಯ ಸಂಬಂಧಗಳು, ಬಾಂಧವ್ಯಗಳು ಹಾಗೂ ಸಾಮಾಜಿಕ ಮೌಲ್ಯಗಳನ್ನು ಉಳಿಸಿಕೊಳ್ಳುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಪೂರಕವಾಗುವ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಸಾರ್ಥಕಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳು ಮಾತ್ರ ಯಶಸ್ಸಿನ ಮಾನದಂಡವಲ್ಲ. ಉತ್ತಮ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳೇ ಜೀವನದ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯ ದುಷ್ಪರಿಣಾಮಗಳಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಗುರಿಯಿಂದ ದೂರವಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಸಮಯವನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಣದ ಕಡೆ ಹೆಚ್ಚಿನ ಗಮನ ಹರಿಸಬೇಕು. ಇಂದು ಜ್ಞಾನ ಮತ್ತು ಶಿಕ್ಷಣದ ಮೂಲಕ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡುವ ಅವಕಾಶಗಳಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ಆತ್ಮವಿಶ್ವಾಸದ ಮೂಲಕ ಉನ್ನತ ಸಾಧನೆ ಮಾಡಬಹುದು ಎಂದು ಹೇಳಿದರು.

ಹೆತ್ತೂರು ಭಾಗದ ಅನೇಕ ಹಿರಿಯರು ಶಿಕ್ಷಣದ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಸಾಧನೆಗಳನ್ನು ಪ್ರೇರಣೆಯಾಗಿ ತೆಗೆದುಕೊಂಡು ಇಂದಿನ ವಿದ್ಯಾರ್ಥಿಗಳು ಮುಂದುವರಿಯಬೇಕು. ನಂಬಿಕೆ, ಶ್ರದ್ಧೆ ಹಾಗೂ ನಿರಂತರ ಪರಿಶ್ರಮ ಇದ್ದರೆ ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯದ ಮೇಲೆ ವಿಶ್ವಾಸ ಇಟ್ಟುಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆಂಚೇಗೌಡ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಸಮಾಜಮುಖಿ ಹೋರಾಟಗಾರರು ಮತ್ತು ಶಿಕ್ಷಕರನ್ನು ಗೌರವಿಸುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮಲ್ಲಿರುವ ಸಂಕುಚಿತ ಮನೋಭಾವವನ್ನು ತೊರೆದು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕಗಳ ಜ್ಞಾನ ಮಾತ್ರ ಸಾಕಾಗುವುದಿಲ್ಲ. ಜಗತ್ತಿನ ಆಗುಹೋಗುಗಳ ಕುರಿತು ಅರಿವು ಹೊಂದುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ದಿನಪತ್ರಿಕೆಗಳ ಓದು ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ ಎಂದು ಹೇಳಿದರು.ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಆವಿಷ್ಕಾರಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಯಾವುದೇ ವಿಷಯದಲ್ಲಿ ಹಿನ್ನಡೆ ಉಂಟಾದರೂ ನಿರಾಶರಾಗದೆ ನಿರಂತರ ಪ್ರಯತ್ನದ ಮೂಲಕ ಗುರಿ ಸಾಧಿಸಬೇಕು. ಉನ್ನತ ಪದವಿಗಳು ಮಾತ್ರ ಜ್ಞಾನದ ಮಾನದಂಡವಲ್ಲ. ನಿರಂತರ ಅಧ್ಯಯನ, ಅನುಭವ ಹಾಗೂ ಜಗತ್ತಿನ ವಿವಿಧ ಕ್ಷೇತ್ರಗಳ ಅರಿವಿನ ಮೂಲಕವೂ ವ್ಯಕ್ತಿ ಅಪಾರ ಜ್ಞಾನ ಸಂಪಾದಿಸಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಹೆತ್ತೂರು ಹೋಬಳಿ ಘಟಕದ ಅಧ್ಯಕ್ಷ ಎಚ್.ಪಿ. ರವಿಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವುದು ಹಾಗೂ ಅವರ ಪ್ರತಿಭೆ ಮತ್ತು ಸಾಧನೆಯನ್ನು ಗುರುತಿಸಿ ಸಮಾಜದ ಗಮನಕ್ಕೆ ತರುವುದು ಘಟಕದ ಪ್ರಮುಖ ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿಯೂ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಅವರ ಸಾಧನೆಗೆ ಸೂಕ್ತ ವೇದಿಕೆ ಒದಗಿಸಿ ಸಾರ್ವಜನಿಕವಾಗಿ ಗೌರವಿಸುವ ಮೂಲಕ ಇತರ ವಿದ್ಯಾರ್ಥಿಗಳಲ್ಲಿಯೂ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಬಹುದು. ವಿದ್ಯಾರ್ಥಿಗಳ ಸಾಧನೆಯನ್ನು ಸಮಾಜದ ಮುಂದೆ ಪರಿಚಯಿಸುವುದರಿಂದ ಅವರು ಮತ್ತಷ್ಟು ಉತ್ಸಾಹದಿಂದ ಮುಂದಿನ ಗುರಿಗಳತ್ತ ಸಾಗಲು ಪ್ರೇರಣೆ ದೊರೆಯುತ್ತದೆ. ಇದೇ ವೇಳೆ ಇತರ ವಿದ್ಯಾರ್ಥಿಗಳಿಗೂ ಇದು ಸ್ಫೂರ್ತಿದಾಯಕವಾಗುತ್ತದೆ ಎಂದು ಹೇಳಿದರು.

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಸಾಧನೆ ವಿಶೇಷವಾಗಿ ಅಭಿನಂದನಾರ್ಹವಾಗಿದೆ. ಅವರ ಯಶೋಗಾಥೆಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ದಾರಿದೀಪವಾಗಲಿ ಹಾಗೂ ಕನ್ನಡ ಮಾಧ್ಯಮ ಶಿಕ್ಷಣದ ಮಹತ್ವವನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ 19 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ದಲಿತ ಮುಖಂಡ ಎಚ್.ಎನ್. ಅಣ್ಣಯ್ಯ ಹಾಗೂ 32 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ ದೇವಕಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯದರ್ಶಿ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಹೇಮಂತ್ ಕುಮಾರ್ ನಿರೂಪಿಸಿದರು.

ವೇದಿಕೆಯಲ್ಲಿ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಪವನ್, ಕೋಣಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕಿ ದೇವಕಿ, ಮಲೆನಾಡು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಸಾಗರ್ ಜಾನಕೆರೆ, ಸಮಾಜಸೇವಕ ಎಚ್.ವಿ. ಸೋಮಶೇಖರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಇ. ನಾಗಭೂಷಣ, ರಾಜ್ಯ ಕಾರ್ಮಿಕ ಘಟಕದ ಸದಸ್ಯ ಬಿ.ಟಿ. ವಿಜಯ್ ಕುಮಾರ್, ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಪುರಸ್ಕೃತ ಎಚ್.ಎನ್. ಅಣ್ಣಯ್ಯ, ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಚ್.ಜಿ. ದೇವರಾಜ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಉಜ್ಮ್ ರುಜ್ಮಿ ಸುದರ್ಶನ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *