
ಸಕಲೇಶಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ . ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭಾಸ್ಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಿಂದ ವಾದ್ಯವೃಂದದೊಂದಿಗೆ ಆರಂಭವಾದ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರ ಪರ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.
ಮೆರವಣಿಗೆ ವೇಳೆ ಪಕ್ಷದ ಧ್ವಜಗಳನ್ನು ಹಿಡಿದು ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದು,ನಂತರ ಹಳೆ ಬಸ್ ನಿಲ್ದಾಣದ ಬಳಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ತಮ್ಮ ಸಂತೋಷವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭಾಸ್ಕರ್, “ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂಭ್ರಮದ ಕ್ಷಣವಾಗಿದೆ. ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಮತ್ತು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ.
ಈ ಹಿಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಇದರಿಂದ ಸರ್ಕಾರ ಜನಮಾನಸದಲ್ಲಿ ಉಳಿದಿದೆ. ಡಿ. ಕೆ ಶಿವಕುಮಾರ್ ರವರ ಆಡಳಿತದಲ್ಲಿ ಕರ್ನಾಟಕ ರಾಜ್ಯ ಸಮಗ್ರ ಅಭಿವೃದ್ಧಿಯತ್ತ ಸಾಗಲಿದ್ದು, ರೈತರು, ಕಾರ್ಮಿಕರು, ಯುವಕರು ಹಾಗೂ ಎಲ್ಲಾ ವರ್ಗದ ಜನರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿ, ಮೂಲಸೌಕರ್ಯಗಳ ವಿಸ್ತರಣೆ, ಕೃಷಿ ಮತ್ತು ಕೈಗಾರಿಕಾ ಕ್ಷೇತ್ರಗಳ ಬೆಳವಣಿಗೆಗೆ ಹೊಸ ವೇಗ ದೊರೆಯಲಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸುವ ಆಡಳಿತವನ್ನು ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕೆಪಿಸಿಸಿ ಸದಸ್ಯ ಕೊಲ್ಲಹಳ್ಳಿ ಸಲೀಂ ಮಾತನಾಡಿ ವಿದ್ಯಾರ್ಥಿ ದೆಸೆಯಿಂದಲೇ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಡಿ. ಕೆ ಶಿವಕುಮಾರ್ ಹಲವಾರು ಹೋರಾಟಗಳನ್ನು ಮಾಡಿದ್ದು 8 ಬಾರಿ ಶಾಸಕರಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಲು ಬೆಂಬಲ ನೀಡಿದ್ದರು.
ಇದೀಗ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಆಡಳಿತದಲ್ಲಿ ರಾಜ್ಯ ದಲ್ಲಿ ಬದಲಾವಣೆ ಆಗಿ ರಾಜ್ಯ ಅಭಿವೃದ್ಧಿಯ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಹೆಗ್ಗೋವೆ ಪುಟ್ಟಣ್ಣ, ದೊಡ್ಡದೀಣೆ ಮಂಜುನಾಥ್, ಗುಲಗಳಲೆ ನೀಲಣ್ಣ,ವೈ. ಪಿ ರಾಜೇಗೌಡ,ತುಳಸಿ ಪ್ರಸಾದ್,ರವಿ, ಆದರ್ಶ,ಜಗದೀಶ್ ಹಡ್ಲಹಳ್ಳಿ, ಭುವನಾಕ್ಷ, ತಸ್ಲೀಮ್, ಶೇಖರಯ್ಯ, ಸುಂದರಮ್ಮ,ಸರೋಜ,ಹೊಸೂರು ಗೀತಾ, ಪರ್ವೀಜ್ ಮುಂತಾದವರು ಹಾಜರಿದ್ದರು
