ಸಕಲೇಶಪುರ, ಜೂನ್ 5: ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

ವೈಚಾರಿಕ ಸಂಜೆ ದಿನಪತ್ರಿಕೆ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ), ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿಬಿರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಹೇಶ್ ಉದ್ಘಾಟಿಸಿದರು.

ಶಿಬಿರದಲ್ಲಿ ನೂರಾರು ಜನರು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಆದಿಚುಂಚನಗಿರಿ ಆಸ್ಪತ್ರೆಯ 50ಕ್ಕೂ ಹೆಚ್ಚು ತಜ್ಞ ವೈದ್ಯರು ವಿವಿಧ ವಿಭಾಗಗಳಲ್ಲಿ ತಪಾಸಣೆ ನಡೆಸಿ, ರೋಗಿಗಳಿಗೆ ಅಗತ್ಯ ಆರೋಗ್ಯ ಸಲಹೆ ಹಾಗೂ ಸಮಾಲೋಚನೆ ನೀಡಿದರು.

ಹೃದಯ, ಮಧುಮೇಹ, ಕಣ್ಣು, ಕಿವಿ-ಮೂಗು-ಗಂಟಲು, ಕೀಲು ಮತ್ತು ಮೂಳೆ, ಸ್ತ್ರೀರೋಗ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಜನರು ವೈದ್ಯರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.

ಶಿಬಿರದಲ್ಲಿ ಉಚಿತ ಇಸಿಜಿ, ರಕ್ತ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು.ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಕೆಲ ರೋಗಿಗಳನ್ನು ಮುಂದಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆಯನ್ನೂ ಮಾಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಮನೆಬಾಗಿಲಲ್ಲೇ ಗುಣಮಟ್ಟದ ವೈದ್ಯಕೀಯ ಸೇವೆ ದೊರೆತಿರುವುದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.

ವಿಶೇಷವಾಗಿ ಮಹಿಳೆಯರು, ರೈತರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದ ಯಶಸ್ಸಿಗೆ ಗ್ರಾಮಪಂಚಾಯಿತಿ ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಶ್ರಮವಹಿಸಿದ್ದರು.ಈ ಆರೋಗ್ಯ ಶಿಬಿರವು ಗ್ರಾಮೀಣ ಜನರ ಆರೋಗ್ಯ ಕಾಳಜಿಗೆ ಹೊಸ ದಿಕ್ಕು ನೀಡಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಹಾಗೂ ವಿವಿಧ ವಲಯಗಳಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಬೆಳೆಗಾರರು ಹಾಗೂ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *