
ಸಕಲೇಶಪುರ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ರಾಜ್ಯ ಆರೋಗ್ಯ ಸಚಿವರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಬಡ ಹಾಗೂ ನಿರ್ಗತಿಕ ರೋಗಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು.
ಆಸ್ಪತ್ರೆಯಲ್ಲಿ ಲ್ಯಾಬ್ ಸೇವೆಗಳ ಕೊರತೆ, ಡಯಾಲಿಸಿಸ್ ಕೇಂದ್ರದ ಸಮಸ್ಯೆಗಳು, ಸ್ಕ್ಯಾನಿಂಗ್ ಸೌಲಭ್ಯದ ಅಭಾವ ಸೇರಿದಂತೆ ಹಲವು ಮೂಲಭೂತ ಆರೋಗ್ಯ ಸೇವೆಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಚಿವರ ಗಮನ ಸೆಳೆಯಲಾಯಿತು.
ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.ಅಲ್ಲದೆ, ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲ ವೈದ್ಯರು ರೋಗಿಗಳಿಂದ ಹಣ ಪಡೆದು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ ಎಂಬ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಆರೋಪಗಳ ಕುರಿತು ಸಹ ಆರೋಗ್ಯ ಸಚಿವರ ಗಮನಕ್ಕೆ ತರಲಾಯಿತು.
ಈ ಕುರಿತು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.ಇದರೊಂದಿಗೆ, ಸಕಲೇಶಪುರ ತಾಲ್ಲೂಕು ಆರೋಗ್ಯಾಧಿಕಾರಿ (THO) ಅವರ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಅಸಮಾಧಾನವನ್ನು ಉಲ್ಲೇಖಿಸಿ, ಆಡಳಿತಾತ್ಮಕ ಸುಧಾರಣೆಯ ಹಿತದೃಷ್ಟಿಯಿಂದ ಸಕಲೇಶಪುರದ ಪ್ರಸ್ತುತ THO ಅವರನ್ನು ವರ್ಗಾವಣೆ ಮಾಡಿ, ಜನಸ್ನೇಹಿ ಹಾಗೂ ಪರಿಣಾಮಕಾರಿ ಸೇವೆ ನೀಡಬಲ್ಲ ಅಧಿಕಾರಿಯನ್ನು ನೇಮಕ ಮಾಡುವಂತೆ ಸಚಿವರಿಗೆ ಮನವಿ ಮಾಡಲಾಯಿತು.
ಸರ್ಕಾರಿ ಆಸ್ಪತ್ರೆಗಳು ಬಡವರ ಆಶಾಕಿರಣವಾಗಿದ್ದು, ಯಾವುದೇ ರೀತಿಯ ಲೋಪ ಅಥವಾ ಅವ್ಯವಸ್ಥೆಗೆ ಅವಕಾಶ ನೀಡದೆ ಜನಸ್ನೇಹಿ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕೆಂದು SDPI ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿ ಆಗ್ರಹಿಸಿದೆ.– SDPI ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿ
