ಸಕಲೇಶಪುರ : ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಜಾರಿಗೊಂಡಿರುವ ಜಲ ಜೀವನ್ ಮಿಷನ್ (JJM) ಕಾಮಗಾರಿ ಹಲವೆಡೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಆರೋಪಿಸಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಗಳನ್ನು ಅಗೆದು ಪೈಪ್ ಅಳವಡಿಕೆ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಿಂದ ರಸ್ತೆಗಳು ಹಾಳಾಗಿವೆ. ಆದರೆ ರಸ್ತೆ ಹಾನಿಯಾದ ನಂತರವೂ ಸಮರ್ಪಕ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಕಲ್ಪಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದೆ.

ಹಲವು ಕಡೆ ಕಾಮಗಾರಿ ಅಪೂರ್ಣವಾಗಿದ್ದು, ದುಬಾರಿ ಪೈಪ್‌ಗಳು ಬಳಕೆಯಾಗದೆ ಬಿದ್ದಿವೆ. ಸಂಬಂಧಪಟ್ಟ ಅಧಿಕಾರಿಗಳ ಬಳಿ ಸ್ಪಷ್ಟ ಮಾಹಿತಿ ಇಲ್ಲದಿರುವುದು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ಅಧಿಕಾರಾವಧಿ ಮುಗಿದಿರುವುದರಿಂದ ಸಮಸ್ಯೆ ಪರಿಹಾರಕ್ಕೆ ಅಡಚಣೆ ಉಂಟಾಗಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ನಿರ್ಮಿಸಲಾದ ಅಥವಾ ದುರಸ್ತಿ ಮಾಡಿದ ರಸ್ತೆಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವ ಪರಿಣಾಮ, ಮಳೆಗಾಲದಲ್ಲಿ ರಸ್ತೆಗಳು ಹಾಗೂ ಪೈಪ್ ಅಳವಡಿಕೆಗೆ ತೆಗೆದಿರುವ ಕಾಲುವೆಗಳು ಕುಸಿದು ವಾಹನ ಸವಾರರ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಸಂಘಟನೆ ಎಚ್ಚರಿಸಿದೆ.

ಜಲ ಜೀವನ್ ಮಿಷನ್ ಕಾಮಗಾರಿಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ತಕ್ಷಣ ಸಮಸ್ಯೆ ಪರಿಹರಿಸಬೇಕು. ಇಲ್ಲವಾದಲ್ಲಿ ಕಾಮಗಾರಿ ಅವ್ಯವಸ್ಥೆಯಿಂದ ಸಂಭವಿಸಬಹುದಾದ ಅಪಘಾತಗಳಿಗೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ತಿಳಿಸಿದೆ.

ಕಾಮಗಾರಿ ಗುತ್ತಿಗೆದಾರರನ್ನು ಸಂಪರ್ಕಿಸಿದಾಗ, ಸರ್ಕಾರದಿಂದ ಹಣ ಬಿಡುಗಡೆಯಾಗದಿರುವುದೇ ಕಾಮಗಾರಿ ವಿಳಂಬಕ್ಕೆ ಕಾರಣ ಎಂದು ಅವರು ಹೇಳುತ್ತಿರುವುದಾಗಿ ಸಂಘಟನೆ ಆರೋಪಿಸಿದೆ.

ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *