ಚನ್ನರಾಯಪಟ್ಟಣ: ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರು ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಆದಿಚುಂಚನಗಿರಿ ಹಾಸನ–ಕೊಡಗು ಮಠದ ಕಾರ್ಯದರ್ಶಿ ಶಂಭುನಾಥಸ್ವಾಮೀಜಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಹಿರೀಸಾವೆ ಹೋಬಳಿ ಘಟಕ ಹಾಗೂ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಹಾಗೂ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರದಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

“ವಿದ್ಯೆ ಕಲಿತವರು ದಾರಿ ತಪ್ಪಬಹುದು, ಆದರೆ ಸಂಸ್ಕಾರ ಕಲಿತವರು ಎಂದಿಗೂ ದಾರಿ ತಪ್ಪುವುದಿಲ್ಲ. ಆದಿಚುಂಚನಗಿರಿ ಮಠದ ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಗಳು 1986ರಲ್ಲಿ ಅಖಿಲ ಭಾರತ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಪ್ರೋತ್ಸಾಹ ನೀಡಿದ್ದರು” ಎಂದು ಅವರು ಸ್ಮರಿಸಿದರು.

ಕನ್ನಡ ಭಾಷೆ ಅಮೃತ ಭಾಷೆಯಾಗಿದ್ದು, ರಾಜ್ಯದಲ್ಲಿರುವ ಅನ್ಯಭಾಷಿಕರು ಕನ್ನಡ ಕಲಿಯಬೇಕು. ಐಎಎಸ್, ಐಪಿಎಸ್ ಸೇರಿದಂತೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಕನ್ನಡ ಭಾಷೆಯನ್ನು ಕಲಿತು ಕಾರ್ಯನಿರ್ವಹಿಸಿದರೆ ಜನಸಾಮಾನ್ಯರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದರು. ಇತ್ತೀಚೆಗೆ ಕೆಲವು ನ್ಯಾಯಾಲಯಗಳ ತೀರ್ಪುಗಳು ಕನ್ನಡದಲ್ಲಿ ಪ್ರಕಟವಾಗುತ್ತಿರುವುದು ಸಂತಸದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ನ್ಯಾಯಾಲಯಗಳ ಆದೇಶಗಳು ಹಾಗೂ ತೀರ್ಪುಗಳು ಸ್ಥಳೀಯ ಭಾಷೆಯಲ್ಲೇ ಪ್ರಕಟವಾಗುವಂತಾಗಬೇಕು ಎಂದು ಆಶಿಸಿದರು.

ಸಾಹಿತಿ ಪ್ರೊ. ಹೊಸೂರು ಎನ್. ತಮ್ಮಣ್ಣಗೌಡ ಮಾತನಾಡಿ, ಮಕ್ಕಳಲ್ಲಿರುವ ಜ್ಞಾನವು ಪರೀಕ್ಷೆಗಳ ಮೂಲಕ ಪ್ರತಿಭೆಯಾಗಿ ಹೊರಹೊಮ್ಮುತ್ತದೆ. ಮನೆಯಲ್ಲಿ ಹಿರಿಯರು, ಶಾಲೆಯಲ್ಲಿ ಶಿಕ್ಷಕರು ಹಾಗೂ ಸಮಾಜದಲ್ಲಿ ಗುರುಗಳು ನೀಡುವ ಮಾರ್ಗದರ್ಶನವನ್ನು ಶ್ರದ್ಧೆಯಿಂದ ಅನುಸರಿಸಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದು ಹೇಳಿದರು.

ಹಿರೀಸಾವೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಹೆಚ್.ಎ. ಪ್ರಮೋದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪ್ರೊ. ಹೆಚ್.ಪಿ. ಶಂಕರ್, ಮಾಜಿ ಅಧ್ಯಕ್ಷ ಹೆಚ್.ಇ. ಬೋರಣ್ಣ, ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಟಿ. ತಿಮ್ಮೇಗೌಡ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *