ಸಕಲೇಶಪುರ: ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಣಿಗಲ್ ಗ್ರಾಮದಲ್ಲಿ ಜೂನ್ 28 ಹಾಗೂ 29ರಂದು ಸುರಿದ ಭಾರೀ ಮಳೆಯಿಂದ ಶೇಖರ್ (ದೀಪು ಅವರ ಪುತ್ರ) ಅವರ ಮನೆಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಗೆ ಭಾರೀ ಹಾನಿಯಾಗಿದೆ. ಸದ್ಯ ಮನೆ ಅಪಾಯದ ಸ್ಥಿತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆ ಸುರಿದರೆ ಸಂಪೂರ್ಣ ಮನೆ ಕುಸಿಯುವ ಆತಂಕ ಕುಟುಂಬವನ್ನು ಕಾಡುತ್ತಿದೆ.

ಸ್ಥಳೀಯರ ಮಾಹಿತಿ ಪ್ರಕಾರ, 2024 ಮತ್ತು 2025ರಲ್ಲೂ ಸುರಿದ ಭಾರೀ ಮಳೆಯಿಂದ ಇದೇ ಮನೆಗೆ ಸಾಕಷ್ಟು ಹಾನಿಯಾಗಿತ್ತು. ಆಗ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ಬಾರಿ ಮತ್ತೆ ಮಳೆಯಿಂದ ತಡೆಗೋಡೆ ಕುಸಿದಿರುವ ಹಿನ್ನೆಲೆಯಲ್ಲಿ ಕುಟುಂಬ ತೀವ್ರ ಆತಂಕದಲ್ಲಿದೆ. ಮನೆ ಪಕ್ಕದಲ್ಲೇ ಬಿರುಕುಗಳು ಕಾಣಿಸಿಕೊಂಡಿದ್ದು, ಇನ್ನಷ್ಟು ಮಳೆ ಸುರಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಗ್ರಾಮಸ್ಥರು ಸಂಬಂಧಪಟ್ಟ ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾಡಳಿತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಮೌಲ್ಯಮಾಪನ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು. “ಅನಾಹುತ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅಪಾಯದ ಮುನ್ಸೂಚನೆ ಇರುವ ಈಗಲೇ ಅಧಿಕಾರಿಗಳು ಸ್ಪಂದಿಸಬೇಕು. ಮುಂದೆ ಯಾವುದೇ ಅವಘಡ ಸಂಭವಿಸಿದರೆ ಅದರ ಹೊಣೆ ಯಾರು ಹೊರುತ್ತಾರೆ?” ಎಂಬ ಪ್ರಶ್ನೆಯನ್ನು ಗ್ರಾಮಸ್ಥರು ಮತ್ತು ಕುಟುಂಬದವರು ಎತ್ತಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *