
ಸಕಲೇಶಪುರ .ರೋಟರಿ ಕ್ಲಬ್ 2026-27 ಸಾಲಿನ ನೂತನ ಅಧ್ಯಕ್ಷರಾಗಿ ರವಿಕುಮಾರ್ ಕಾರ್ಯದರ್ಶಿಯಾಗಿ ದಯಾನಂದ ಹೆಚ್ಆರ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರುಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರೋಟರಿ ಸಂಸ್ಥೆ ಕಳೆದ ಹಲವು ದಶಕಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ಸಂಸ್ಥೆಯ ಮೂಲ ಧ್ಯೇಯವಾಗಿದೆ ಎಂದು ಆರ್‌ಐ ಜಿಲ್ಲೆ–3182ರ ಹಿಂದಿನ ಜಿಲ್ಲಾ ಗವರ್ನರ್, ಪಿಡಿಜಿ, ಪಿಎಚ್‌ಎಫ್ ಕೆ. ಪಾಲಾಕ್ಷ ಹೇಳಿದರು.
ಪಟ್ಟಣದ ರೋಟರಿ ಹಾಲ್‌ನಲ್ಲಿ ಮಂಗಳವಾರ ನಡೆದ ರೋಟರಿ ಕ್ಲಬ್ ಆಫ್ ಸಕಲೇಶಪುರದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಸಕಲೇಶಪುರ ರೋಟರಿ ಕ್ಲಬ್ ಕಳೆದ 45 ವರ್ಷಗಳಿಂದ ಒಂದು ಶಿಕ್ಷಣ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಈ ಅವಧಿಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರ ಸಮರ್ಪಿತ ಸೇವೆಯಿಂದಲೇ ಕ್ಲಬ್ ಉತ್ತಮ ಹೆಸರು ಗಳಿಸಿದೆ. ಅವರ ಸೇವೆಯನ್ನು ಅಭಿನಂದಿಸಲೇಬೇಕು ಎಂದು ಹೇಳಿದರು.
ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ರೋಟರಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಜಿಲ್ಲೆಯಿಂದ ಅಂತರರಾಷ್ಟ್ರೀಯ ರೋಟರಿ ಫೌಂಡೇಶನ್‌ಗೆ ಅತಿ ಹೆಚ್ಚು ದೇಣಿಗೆ ನೀಡಲಾಗಿದೆ.
ಇದರ ಪರಿಣಾಮವಾಗಿ ಲಕ್ಷಾಂತರ ಮಕ್ಕಳಿಗೆ ಪೋಲಿಯೊ ಲಸಿಕೆ ತಲುಪಿದ್ದು, ದೇಶ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ರೋಟರಿ ಹಾಗೂ ಲಯನ್ಸ್ ಸಂಸ್ಥೆಗಳು ಮಾತ್ರ ಪ್ರತಿವರ್ಷ ಅಧಿಕಾರ ಹಸ್ತಾಂತರದ ವಿಶಿಷ್ಟ ಪರಂಪರೆಯನ್ನು ಅನುಸರಿಸುತ್ತಿವೆ. ಹೊಸ ನಾಯಕತ್ವಕ್ಕೆ ಅವಕಾಶ ನೀಡುವ ಮೂಲಕ ಹೊಸ ಆಲೋಚನೆಗಳು ಮತ್ತು ಹೊಸ ಸೇವಾ ಕಾರ್ಯಕ್ರಮಗಳನ್ನು ಸಮಾಜಕ್ಕೆ ತಲುಪಿಸುವ ಕಾರ್ಯ ಈ ಸಂಸ್ಥೆಗಳ ಮೂಲಕ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ನಾಲ್ಕು ಹೊಸ ರೋಟರಿ ಕ್ಲಬ್‌ಗಳನ್ನು ಆರಂಭಿಸಲಾಗಿದೆ. ಸಮಾಜಮುಖಿ ಚಟುವಟಿಕೆಗಳಿಗಾಗಿ ಎರಡು ಕೋಟಿಗೂ ಅಧಿಕ ದೇಣಿಗೆಯನ್ನು ಸಂಗ್ರಹಿಸಲಾಗಿದೆ. ಸುಮಾರು 40 ಲಕ್ಷ ರೂ. ಮೌಲ್ಯದ ಐದು ಗ್ಲೋಬಲ್ ಗ್ರಾಂಟ್ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ ಎಂದು ವಿವರಿಸಿದರು.
ಸಕಲೇಶಪುರ ರೋಟರಿ ಕ್ಲಬ್ ಸೇವಾ ಮನೋಭಾವದಿಂದ ಸದಾ ಮುಂಚೂಣಿಯಲ್ಲಿದ್ದು, ನೂತನ ಅಧ್ಯಕ್ಷ ರವಿಕುಮಾರ್ ಅವರ ನಾಯಕತ್ವದಲ್ಲಿ ಕ್ಲಬ್ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನರ ವಿಶ್ವಾಸವನ್ನು ಇನ್ನಷ್ಟು ಗಳಿಸಲಿ ಎಂದು ಶುಭ ಹಾರೈಸಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರವಿಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯ ಸೇವಾ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದರು.
ಮುಂದಿನ ಒಂದು ವರ್ಷದ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರಗಳು, ರಕ್ತದಾನ ಶಿಬಿರಗಳು ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ ಸಾವಿರಾರು ಸಸಿಗಳನ್ನು ನೆಡುವ ಕಾರ್ಯಕ್ರಮ, ನೀರಿನ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳ ವಿತರಣೆ, ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು, ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.
ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಕೈಗೊಂಡು ಸಾರ್ವಜನಿಕರಲ್ಲಿ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಯುವಜನರನ್ನು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ವಿಶೇಷ ಯೋಜನೆಗಳನ್ನು ರೂಪಿಸಿ ರೋಟರಿಯ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹೇಳಿದರು.
ಸಹಾಯಕ ಗವರ್ನರ್ ಆರ್‌ಟಿಎನ್. ಪಿಎಚ್‌ಎಫ್ ಡಾ. ಗಣೇಶ್ ಎಸ್. ಮಾತನಾಡಿ, ರೋಟರಿ ಸಂಸ್ಥೆಯ ಯಶಸ್ಸಿನ ಹಿಂದೆ ಸದಸ್ಯರ ಸೇವಾ ಮನೋಭಾವವೇ ಪ್ರಮುಖ ಶಕ್ತಿಯಾಗಿದೆ. ಪ್ರತಿಯೊಬ್ಬ ಸದಸ್ಯರೂ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಿದಾಗ ಸಂಸ್ಥೆಯ ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದರು.
ವಲಯ-8ರ ಎಡಿಎಲ್‌ಟಿ ಆರ್‌ಟಿಎನ್. ಪಿಎಚ್‌ಎಫ್ ವೀರೇಂದ್ರ ಕುಮಾರ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಸೇವಾ ಕಾರ್ಯಗಳಲ್ಲಿ ಎಲ್ಲ ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಕೆ.ಜಿ. ಚಂದ್ರಶೇಖರ್ ಅವರು ಕಳೆದ ಸಾಲಿನ ಸೇವಾ ಕಾರ್ಯಗಳ ವರದಿ ಮಂಡಿಸಿ, ಸದಸ್ಯರ ಸಹಕಾರದಿಂದ ಅನೇಕ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದರು. ನಿರ್ಗಮಿತ ಕಾರ್ಯದರ್ಶಿ ವಿಜೀತ್ ಎಂ.ಡಿ. ವಾರ್ಷಿಕ ವರದಿ ವಾಚಿಸಿದರು.
ಈ ಸಂದರ್ಭದಲ್ಲಿ ನೂತನ ಕಾರ್ಯದರ್ಶಿ ದಯಾನಂದ ಎಚ್.ಆರ್. ಸೇರಿದಂತೆ 2026–27ನೇ ಸಾಲಿನ ಪದಾಧಿಕಾರಿಗಳನ್ನು ಅಧಿಕೃತವಾಗಿ ಪರಿಚಯಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸದಸ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ನ ಸದಸ್ಯರು, ಮಾಜಿ ಅಧ್ಯಕ್ಷರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.
