ಸಕಲೇಶಪುರ, ಜು. 8: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಸಕಲೇಶಪುರ ಪಟ್ಟಣದ ವಾರ್ಡ್ ನಂ. 4ರ ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೊನಿಯಲ್ಲಿ ತಡೆಗೋಡೆ ಕುಸಿದು ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ (ಆಲೂರು–ಕಟ್ಟಾಯ–ಸಕಲೇಶಪುರ) ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಮುರಳಿ ಮೋಹನ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಡೆಗೋಡೆ ಕುಸಿತದಿಂದ ಅಪಾಯದ ಅಂಚಿನಲ್ಲಿರುವ ಮನೆಗಳನ್ನು ವೀಕ್ಷಿಸಿದ ಅವರು, ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಕುರಿತು ಸಮಗ್ರ ಮಾಹಿತಿ ಪಡೆದು, ಜನರ ಸುರಕ್ಷತೆಗೆ ಯಾವುದೇ ರೀತಿಯ ನಿರ್ಲಕ್ಷ್ಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದರು.

ಹಾನಿಗೊಳಗಾದ ಕುಟುಂಬಗಳೊಂದಿಗೆ ಮಾತನಾಡಿದ ಶ್ರೀಮರಳಿ ಮೋಹನ್, ಸರ್ಕಾರದಿಂದ ನೀಡಲಾಗುವ ಪರಿಹಾರವನ್ನು ಶೀಘ್ರದಲ್ಲೇ ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮಳೆಗಾಲದಲ್ಲಿ ಜನರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.ಅಲ್ಲದೆ, ನಿರಂತರ ಮಳೆಯ ಹಿನ್ನೆಲೆಯಲ್ಲಿ ಅಪಾಯದ ಪ್ರದೇಶಗಳನ್ನು ಗುರುತಿಸಿ ತುರ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಇಂತಹ ಅನಾಹುತಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.

ಸಾರ್ವಜನಿಕರು ಸಹ ಮಳೆಗಾಲದಲ್ಲಿ ಎಚ್ಚರಿಕೆಯಿಂದ ವರ್ತಿಸಿ, ಅಪಾಯದ ಪ್ರದೇಶಗಳಲ್ಲಿ ಅನಗತ್ಯ ಸಂಚಾರ ತಪ್ಪಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಕಲೇಶಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಜ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕಲ್ಕಣೆ ಪ್ರಶಾಂತ್, ಸಕಲೇಶಪುರ ಯೋಜನಾ ಪ್ರಾಧಿಕಾರದ ಸದಸ್ಯ ಬ್ರೈಕೆರೆ ದೇವರಾಜ್, ಬಗರ್ ಹುಕುಂ ಸಮಿತಿಯ ಸದಸ್ಯ ಎಚ್.ಎಚ್. ಉದಯ್, ಹಳೆಕೆರೆ ಚಂದ್ರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed