
ಸಕಲೇಶಪುರ : ಪಟ್ಟಣದ ಕುಶಾಲನಗರ ಬಿಲಾಲ್ ಮಸೀದಿ ರಸ್ತೆಯಲ್ಲಿರುವ ಆಟೋ ಚಾಲಕ ಇಕ್ಬಾಲ್ ಅವರ ಮನೆಯ ಹಿಂಭಾಗದಲ್ಲಿ ಕಳೆದ ಒಂದು ವರ್ಷದ ಹಿಂದೆಯೇ ಗುಡ್ಡ ಕುಸಿದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಮಳೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಇದರಿಂದ ಮನೆಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದು, ಕುಟುಂಬದವರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.ಸ್ಥಳೀಯರು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಆರೋಪಿಸಿದ್ದಾರೆ.
ಈ ವರ್ಷದ ಮಳೆಯಿಂದ ಮತ್ತಷ್ಟು ಗುಡ್ಡ ಕುಸಿದು ಅನಾಹುತ ಸಂಭವಿಸಿದರೆ ಅದರ ಹೊಣೆಯನ್ನು ಯಾರು ಹೊರುತ್ತಾರೆ ಎಂಬ ಪ್ರಶ್ನೆಯನ್ನು ನಿವಾಸಿಗಳು ಎತ್ತಿದ್ದಾರೆ.
ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ನಿವಾಸಿಗಳ ಜೀವ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸುವಂತೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
