ಸಕಲೇಶಪುರ: ಪಟ್ಟಣದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ದಿಡೀರ್ ಭೇಟಿ ನೀಡಿ, ರೋಗಿಗಳಿಗೆ ನೀಡಲಾಗುತ್ತಿರುವ ಉಚಿತ ಚಿಕಿತ್ಸೆ, ಆಸ್ಪತ್ರೆಯ ಸ್ವಚ್ಛತೆ ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳು, ಡಯಾಲಿಸಿಸ್ ಕೇಂದ್ರ, ಆಯುಷ್ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಡಯಾಲಿಸಿಸ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳೊಂದಿಗೆ ಮಾತನಾಡಿ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು, ಯಾವುದೇ ಕೊರತೆ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.ಪರಿಶೀಲನೆ ವೇಳೆ ಆಯುಷ್ ವಿಭಾಗದ ಕಾರ್ಯವೈಖರಿ, ಶೌಚಾಲಯಗಳ ನಿರ್ವಹಣೆ ಹಾಗೂ ವಾರ್ಡ್‌ಗಳಲ್ಲಿ ಹಳೆಯ ಬೆಡ್‌ಶೀಟ್‌ಗಳನ್ನು ಕಂಡು ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್ ಅವರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯ ಸ್ವಚ್ಛತೆ ಹಾಗೂ ಮೂಲಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು.ಮೂಳೆ ಮತ್ತು ಕೀಲು ತಜ್ಞರ ವಿಭಾಗದಲ್ಲಿ ವೈದ್ಯರನ್ನು ಭೇಟಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ಗಮನಿಸಿದ ಶಾಸಕರು, ಕೂಡಲೇ ಟೋಕನ್ ವ್ಯವಸ್ಥೆ ಜಾರಿಗೆ ತಂದು ರೋಗಿಗಳಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸಿಬ್ಬಂದಿಗೆ ಸೂಚಿಸಿದರು.ಬಳಿಕ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಬಡವರ ಜೀವನಾಡಿಯಾಗಿದ್ದು, ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ, ಸ್ವಚ್ಛ ವಾತಾವರಣ ಹಾಗೂ ಗೌರವಯುತ ಸೇವೆ ದೊರೆಯಬೇಕು. ವೈದ್ಯರು ಮತ್ತು ಸಿಬ್ಬಂದಿ ಯಾವುದೇ ನಿರ್ಲಕ್ಷ್ಯವಿಲ್ಲದೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕರು ದಿಡೀರ್ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ ನೀಡಿದ ಕ್ರಮಕ್ಕೆ ರೋಗಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *