
ಸಕಲೇಶಪುರ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಕಲೇಶಪುರ ರೋಟರಿ ಕ್ಲಬ್ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಅರಣ್ಯ ವಿಸ್ತರಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಸುಮಾರು 500ಕ್ಕೂ ಹೆಚ್ಚು ಸಸಿಗಳನ್ನು ಗ್ರಾಮಸ್ಥರು, ರೈತರು ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು. ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್, ಪರಿಸರ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹವಾಮಾನ ಬದಲಾವಣೆ, ಅರಣ್ಯ ನಾಶ ಮತ್ತು ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟಲು ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.
ರೋಟರಿ ವಲಯ–8ರ ಲರ್ನಿಂಗ್ ಫೆಸಿಲಿಟೇಟರ್ ಅರುಣ್ ರಕ್ಷಿದಿ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಗಿಡ ನೆಡುವುದರ ಜೊತೆಗೆ ಅವುಗಳನ್ನು ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಕಲೇಶಪುರ ರೋಟರಿ ಕ್ಲಬ್ ಅಧ್ಯಕ್ಷ ರವಿಕುಮಾರ್, ರೋಟರಿ ಸದಸ್ಯರಾದ ರವಿಶಂಕರ್, ರವಿರಾಜ್ ತಿಲಕ್ ಶೆಟ್ಟಿ, ಬಿಜೆಪಿ ಮುಖಂಡ ರಾಜಕುಮಾರ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಉಪಸ್ಥಿತರಿದ್ದರು.
