
ಸಕಲೇಶಪುರ : ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಸೂಚನೆಯಂತೆ ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಟ್ಟಾಯ ಹೋಬಳಿಯ ಶಂಕರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳೆನಹಳ್ಳಿ ಗ್ರಾಮದ ಜೋಳದ ಹೊಲಗಳಿಗೆ ಬಿಜೆಪಿ ಮುಖಂಡರು ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ವೇಳೆ ಜೋಳದ ಬೆಳೆಗೆ ವ್ಯಾಪಕವಾಗಿ ಹರಡಿರುವ ಬಿಳಿ ಸುಳಿ ರೋಗದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದನ್ನು ವೀಕ್ಷಿಸಿದ ಮುಖಂಡರು, ರಾಜ್ಯ ಸರ್ಕಾರವು ತಕ್ಷಣ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ ಬೆಳೆ ನಷ್ಟ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪರಿಶೀಲನಾ ಸಂದರ್ಭದಲ್ಲಿ ಶಾಸಕರಾದ ಅರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಎಸ್.ಎನ್. ಚೆನ್ನಬಸಪ್ಪ, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್, ಶಾಸಕರಾದ ಹುಲ್ಲಳ್ಳಿ ಸುರೇಶ್, ಸಿಮೆಂಟ್ ಮಂಜು, ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾರಾಯಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
