ಸಕಲೇಶಪುರ, ಆ. 1: ತಾಲೂಕಿನ ಕಿರುಹುಣಸೆ–ವಡೂರು ಗ್ರಾಮದ ವ್ಯಾಪ್ತಿಯಲ್ಲಿ ಒಂಟಿ ಕಾಡಾನೆಗಳಾದ ‘ಭೀಮ’ ಮತ್ತು ‘ಕ್ಯಾಪ್ಟನ್’ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ವೇಳೆ ಗ್ರಾಮಸ್ಥರು, ಕಾಫಿ ತೋಟದ ಮಾಲೀಕರು ಹಾಗೂ ಕಾರ್ಮಿಕರೊಂದಿಗೆ ಸಭೆ ನಡೆಸಿದ ಅರಣ್ಯಾಧಿಕಾರಿಗಳು, ಕಾಡಾನೆಗಳ ಪ್ರಸ್ತುತ ಚಲನ–ವಲನದ ಕುರಿತು ಮಾಹಿತಿ ನೀಡಿದರು.

ಕಾಡಾನೆಗಳು ಇರುವ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಹಾಗೂ ತೋಟಗಳಿಗೆ ಕೆಲಸಕ್ಕೆ ಹೋಗುವ ಮುನ್ನ ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಮಾತ್ರ ತೆರಳುವಂತೆ ಸೂಚಿಸಿದರು.

ಬೆಳಗಿನ ಜಾವ, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬರೇ ತೋಟಗಳಿಗೆ ತೆರಳಬಾರದು. ಸಾಧ್ಯವಾದಷ್ಟು ಗುಂಪಿನಲ್ಲಿ ಸಂಚರಿಸಬೇಕು. ಕಾಡಾನೆ ಕಂಡುಬಂದರೆ ಯಾವುದೇ ಕಾರಣಕ್ಕೂ ಅದರ ಸಮೀಪ ಹೋಗಲು ಅಥವಾ ಫೋಟೋ, ವಿಡಿಯೋ ತೆಗೆಯಲು ಪ್ರಯತ್ನಿಸಬಾರದು. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಕಾಡಾನೆಗಳ ಚಲನವಲನವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಿರಂತರವಾಗಿ ನಿಗಾ ವಹಿಸುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಅರಣ್ಯ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಯಾವುದೇ ಅನಾಹುತ ಸಂಭವಿಸದಂತೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಆರ್‌ಆರ್‌ಟಿ (ರ್ಯಾಪಿಡ್ ರೆಸ್ಪಾನ್ಸ್ ಟೀಮ್) ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು.

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಕಾಡಾನೆಗಳ ಬಗ್ಗೆ ಯಾವುದೇ ಮಾಹಿತಿ ದೊರೆತ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ಅಥವಾ ಸಮೀಪದ ಅರಣ್ಯ ಕಚೇರಿಗೆ ತಿಳಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *