ಸಕಲೇಶಪುರ: ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಶಾಸಕ ಸಿಮೆಂಟ್ ಮಂಜು ಅವರು ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ, ಜನಸಾಮಾನ್ಯರಿಗೆ ದೊರೆಯುತ್ತಿರುವ ಸೇವೆಗಳು ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದ ಶಾಸಕ ಸಿಮೆಂಟ್ ಮಂಜು, ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಮಳೆ ಕೊರತೆಯ ಹಿನ್ನೆಲೆ ತಾಲೂಕಿನ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಳೆದ ಒಂದು ವಾರದಿಂದ ನೀರಿನ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿರುವುದಾಗಿ ತಿಳಿಸಿದ ಅವರು, ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ತಾಲೂಕಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕೊರತೆಯಿಂದ ಕೆಲವರು ಎರಡು ಗ್ರಾಮ ಪಂಚಾಯಿತಿಗಳ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ ಶಾಸಕರು, ಸಿಬ್ಬಂದಿ ಕೊರತೆ ನೆಪವಾಗಬಾರದು. ಜನರ ಕೆಲಸಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಆಡಳಿತ ವ್ಯವಸ್ಥೆ ಪರಿಶೀಲನೆತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ), ಆಡಳಿತಾಧಿಕಾರಿ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿಯನ್ನು ಶಾಸಕ ಸಿಮೆಂಟ್ ಮಂಜು ಪರಿಶೀಲಿಸಿದರು.

“ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವುದು ಹಾಗೂ ತಾಲೂಕು ಪಂಚಾಯಿತಿಯ ಆಸ್ತಿ-ಪಾಸ್ತಿಗಳನ್ನು ಸಮರ್ಪಕವಾಗಿ ಸಂರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು,” ಎಂದು ಅವರು ಹೇಳಿದರು.

ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆಸಭೆಯಲ್ಲಿ ಹೊಸದಾಗಿ ಜಾರಿಗೆ ಬಂದಿರುವ ವಿಬಿಜಿ ರಾಮ್‌ಜಿ ಯೋಜನೆಯ ಮಾರ್ಗಸೂಚಿಗಳ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಶಾಸಕರು, ಯೋಜನೆಯಡಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದುಕೊಂಡರು.ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ವಿತರಣೆಯಲ್ಲಿ ಹಿಂದೆ ಉಂಟಾಗಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದು, ಅರ್ಹ ಫಲಾನುಭವಿಗಳಿಗೆ ಯಾವುದೇ ಅನ್ಯಾಯವಾಗದಂತೆ ಪಾರದರ್ಶಕವಾಗಿ ಯೋಜನೆ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕರಿಗೆ ಸಿಗದ ಆಡಳಿತಾಧಿಕಾರಿಗಳ ವಿರುದ್ಧ ಅಸಮಾಧಾನಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳಾಗಿ ನೇಮಿಸಲಾಗಿದೆ. ಆದರೆ, ಸಾರ್ವಜನಿಕರಿಗೆ ಈ ಅಧಿಕಾರಿಗಳು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿರುವ ಬಗ್ಗೆ ಶಾಸಕ ಸಿಮೆಂಟ್ ಮಂಜು ಅಸಮಾಧಾನ ವ್ಯಕ್ತಪಡಿಸಿದರು.

“ಜನಪ್ರತಿನಿಧಿಗಳು ಇದ್ದಾಗ ಸಾರ್ವಜನಿಕರ ಕೆಲಸಗಳು ಸುಲಭವಾಗಿ ನೆರವೇರುತ್ತವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಪಾತ್ರ ಮಹತ್ವದ್ದಾಗಿದೆ. ಪ್ರಸ್ತುತ ತಾಲೂಕು ಮಟ್ಟದ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿಗಳ ಹೆಚ್ಚುವರಿ ಜವಾಬ್ದಾರಿ ಇದ್ದರೂ, ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಆಡಳಿತಾಧಿಕಾರಿಯೂ ವಾರದಲ್ಲಿ ನಿಗದಿತ ಸಮಯವನ್ನು ಗ್ರಾಮ ಪಂಚಾಯಿತಿಯಲ್ಲಿ ಕಡ್ಡಾಯವಾಗಿ ಮೀಸಲಿಟ್ಟು ಸಾರ್ವಜನಿಕರಿಗೆ ಲಭ್ಯರಾಗಬೇಕು. ಈ ಕುರಿತು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗುವುದು,” ಎಂದು ಶಾಸಕ ಸಿಮೆಂಟ್ ಮಂಜು ಎಚ್ಚರಿಕೆ ನೀಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *