
ಸಭೆಸಕಲೇಶಪುರ: ತಾಲೂಕಿನ ಬಾಗೆ ಗ್ರಾಮ ಪಂಚಾಯಿತಿಯಲ್ಲಿ 2026–27ನೇ ಸಾಲಿನ ಗ್ರಾಮ ಸಭೆಯನ್ನು ಗುರುವಾರ ಆಡಳಿತಾಧಿಕಾರಿ ಪ್ರಕಾಶ್ ಕುಮಾರ್ ಯು ಎಂ ನೋಡಲ್ ಅಧಿಕಾರಿ ಪ್ರಕೃತಿ ಅವರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾರ್ವಜನಿಕರು, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಗ್ರಾಮಗಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸಿದರು.
ಗ್ರಾಮಸ್ಥರು ತಮ್ಮ ವ್ಯಾಪ್ತಿಯಲ್ಲಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದು, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರು.
ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಸ್ವಚ್ಛತೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಮುಂದಿಡಲು ಅವಕಾಶ ದೊರೆತಿದ್ದು, ಸಭೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಯಾಗಿ ಪರಿಣಮಿಸಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಗ್ರಾಮಸ್ಥರು ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಸಮಸ್ಯೆ ಹಾಗೂ ಸಲಹೆಗಳನ್ನು ಮಂಡಿಸುವಂತೆ ಆಡಳಿತಾಧಿಕಾರಿ ಪ್ರಕಾಶ್ ಮನವಿ ಮಾಡಿದರು.
ಸಾರ್ವಜನಿಕರಿಂದ ಬಂದ ಸಲಹೆ ಹಾಗೂ ಬೇಡಿಕೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೈಪ್ರಕಾಶ್ , ಸಹಾಯಕ ನಿರ್ದೇಶಕರು ತಾಲೂಕು ಪಂಚಾಯಿತಿ ಆದಿತ್ಯ , ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಸದಸ್ಯರುಗಳು ವೈದ್ಯಧಿಕಾರಿಗಳು , ಮಾಜಿ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
