ಸಕಲೇಶಪುರ: HIV ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಂತ ಮುಖ್ಯ ಎಂದು ಡಾ. ಅಕ್ಷತಾ ತಿಳಿಸಿದರು.

ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, HIV ಸೋಂಕಿನ ಹರಡುವಿಕೆ, ತಡೆಗಟ್ಟುವ ವಿಧಾನಗಳು ಹಾಗೂ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವ ಕುರಿತು ಮಾಹಿತಿ ನೀಡಿದರು. ಇದರೊಂದಿಗೆ ರಕ್ತದೊತ್ತಡ, ಮಧುಮೇಹ, ಸಿಫಿಲಿಸ್ ಹಾಗೂ HBsAg ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಿದರು.

ಆಪ್ತ ಸಮಾಲೋಚಕರಾದ ಶ್ರೀಮತಿ ಉಷಾ ಅವರು ಮಾತನಾಡಿ, ಸಾರ್ವಜನಿಕರು QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ HIV ಸ್ಥಿತಿಗತಿಯನ್ನು ತಿಳಿದುಕೊಳ್ಳುವ ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

HIV ಕುರಿತು ಯಾವುದೇ ಅನುಮಾನ ಅಥವಾ ಆತಂಕವಿದ್ದಲ್ಲಿ ಸೂಕ್ತ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಪಡೆಯುವಂತೆ ಅವರು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲು ಉಚಿತ ತಪಾಸಣಾ ಸೌಲಭ್ಯ ಒದಗಿಸಲಾಗಿತ್ತು. ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು.

HIV ಸೇರಿದಂತೆ ಇತರೆ ಸಾಂಕ್ರಾಮಿಕ ಹಾಗೂ ಜೀವನಶೈಲಿ ಸಂಬಂಧಿತ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿವೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *