
ಹಾಸನ, ಅ.19: ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಹಾಸನ ತಾಲೂಕು ಸಮಿತಿಯ ವತಿಯಿಂದ ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಅಬಕಾರಿ ಸಚಿವರಾದ ಶಿವಲಿಂಗೇಗೌಡ ಅವರನ್ನು ಸೋಮವಾರ ಹಾಸನ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ, ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಾಸನಾಂಬ ದೇವಸ್ಥಾನದ ಉದ್ಘಾಟನಾ ಸಮಾರಂಭಕ್ಕೆ ಹಾಸನ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳನ್ನು ಆಹ್ವಾನಿಸಬೇಕು ಎಂದು ಸಮಾಜದ ಮುಖಂಡರು ಸಚಿವರಿಗೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವಲಿಂಗೇಗೌಡ ಅವರು, ಈ ಬಾರಿ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯುವ ದಿನದಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ, ರಾಜ್ಯದ ಇತರೆ ಮಠಗಳ ಸ್ವಾಮೀಜಿಗಳು ಹಾಗೂ ಹಾಸನ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳಿಗೆ ನಿಯಮಾನುಸಾರ ಪ್ರೋಟೋಕಾಲ್ ಮೂಲಕ ಗೌರವಪೂರ್ವಕವಾಗಿ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಪುನೀತ್ ಪಟೇಲ್, ಹಾಸನ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
