
ಇಂದು ಹಾಸನ ಜಿಲ್ಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ದಿನಾಚರಣೆಯಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಕುಟುಂಬ ದೂರ ಉಳಿದಿದೆ.ರಾಜ್ಯಾದ್ಯಂತ ಇಂದು ನಾಡಪ್ರಭು ಕೆಂಪೇಗೌಡ ಜನ್ಮದಿನವನ್ನು ಆಚರಣೆ ಮಾಡಲಾಗಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲೂ ಕೂಡ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅದ್ಧೂರಿಯಾಗಿ ಕೆಂಪೇಗೌಡ ದಿನಾಚರಣೆಯನ್ನು ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಹೊಳೆನರಸೀಪುರ ಕ್ಷೇತ್ರದ ಶಾಸಕ ರೇವಣ್ಣ ಗೈರಾಗಿದ್ದಾರೆ.
ಅಲ್ಲದೆ ತಮ್ಮ ಪಕ್ಷದ ಇಬ್ಬರು ಶಾಸಕರು ಭಾಗಿಯಾದರೂ ಕೂಡ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರು ಕಾರ್ಯಕ್ರಮಕ್ಕೆ ಬರದೆ ಇರುವ ಬಗ್ಗೆ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹಾಸನದ ಕಲಾಭವನದ ಬಳಿ ಕೆಂಪೇಗೌಡ ಜಯಂತಿಯ ಮೆರವಣಿಗೆಗೆ ಚಾಲನೆ ನೀಡಿದ್ದು, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ನೋಡುಗರನ್ನು ಸೆಳೆದವು.
