
ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಕರ್ತವ್ಯಲೋಪ ಮಾಡಿದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಆದೇಶಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18 ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಈ ಅಮಾನತು ಮಾಡಲಾಗಿದೆ.
ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ, ಸದ್ಯ ಡಿ ಕಾಳೇನಹಳ್ಳಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಸಿ.ಎಂ., ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ, ಈಗ ಕೆಂಬಾಳು, ಬಾಗೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೃಷ್ಣೇಗೌಡ ಹಾಗೂ ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಸದ್ಯ ಡಿ. ಬಳದರೆ ಹಾಗೂ ದಿಂಡಗೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಮಸ್ವಾಮಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
