
ಬಿಜೆಪಿ 3ನೇ ಪಟ್ಟಿ ಬಿಡುಗಡೆ; ಹಾಲಿ ಶಾಸಕ ರಾಮದಾಸ್ಗೆ ಟಿಕೆಟ್ ಮಿಸ್ | 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ. ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ, ಇದೀಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಹಾಲಿ ಶಾಸಕ ರಾಮದಾಸ್ಗೆ ಟಿಕೆಟ್ ಕೈತಪ್ಪಿದ್ದು, ಕೃಷ್ಣರಾಜ ಕ್ಷೇತ್ರಕ್ಕೆ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಅವರಿಗೆ ಬಿಜೆಪಿ ಮಣೆ ಹಾಕಿದೆ. ಮಹಾದೇವಪುರ ಕ್ಷೇತ್ರದಿಂದ ಅರವಿಂದ ಲಿಂಬಾವಳಿ ಬದಲು ಪತ್ನಿ ಮಂಜಳಾ ಅರವಿಂದ ಲಿಂಬಾವಳಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ್ ಟೆಂಗಿನಕಾಯಿ ಅವಕಾಶ ಪಡೆದುಕೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ಟೆಂಗಿನಕಾಯಿ ಈ ಬಾರಿ ಸ್ಪರ್ಧಿಸಲಿದ್ದಾರೆ. ಕೊಪ್ಪಳದಲ್ಲಿ ಕರಡಿ ಸಂಗಣ್ಣ ಸೊಸೆಗೆ ಟಿಕೆಟ್ ಮಿಸ್ ಆಗಿದ್ದು, ಮಂಜುಳಾ ಅಮರೇಶ್ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಬ್ಬಾಳ ಕ್ಷೇತ್ರದಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಕಟ್ಟಾ ಜಗದೀಶ್ಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ಬಿಡುಗಡೆ ಮಾಡಿದ್ದ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ.
