ಬೆಂಗಳೂರು: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಸೌಜನ್ಯ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದಾರೆ.

ಬುಧವಾರ ಸಂಜೆ ಸೌಜನ್ಯ ಕುಟುಂಬ ಸದಸ್ಯರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮರು ತನಿಖೆ ನಡೆಸುವಂತೆ ಮನವಿ ಮಾಡಿದರು.

ಏನಿದು ಪ್ರಕರಣ?

ಉಜಿರೆಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.

ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು ಕೋರ್ಟ್‌ ದೋಷಮುಕ್ತಗೊಳಿಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *